ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ಮೂಲಕ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿಯನ್ನು ಚೈತ್ರಾ ಕುಂದಾಪುರ ವಂಚನೆ ಮಾಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.
ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಈಕೆಯೊಂದಿಗೆ ನಾಲ್ಕೈದು ಜನರ ತಂಡ ಪಂಗನಾಮ ಹಾಕಿದೆ. ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ನಾಲ್ಕೂ ಜನ ಪೊಲೀಸರ ವಶದಲ್ಲಿ ಇದ್ದಾರೆ.
ಚೈತ್ರಾ ಕುಂದಾಪುರ ಅವರು ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.
ಗೋವಿಂದಬಾಬು ಬೆಂಗಳೂರಿಗೆ ಬಂದಾಗಲೆಲ್ಲಾ, ಚೈತ್ರಾ ಕುಂದಾಪುರ ತನ್ನ ಪರಿಚಯಸ್ತರಿಗೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು.
ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗುತ್ತೆ ಎಂಬ ಆಸೆಗೆ ಬಿದ್ದು ಕೇಳಿದ್ಷಷ್ಟು ಹಣ ಕೊಟ್ಟಿದ್ದರು.
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು ನಾಲ್ಕು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.