ಹೊಸಕೋಟೆ: ತಾಲ್ಲೂಕಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚಿದ ಪ್ರಕರಣ ಮರೆಯುವ ಮುನ್ನವೇ ದಳಸಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಆರೋಪ ಮಾಡಿವೆ.
ಕೃತ್ಯ ಕಾರಣರಾದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು
ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳ ಮುಖಂಡರು ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬೇಟಿ ನೀಡಿದ ಅಧಿಕಾರಿಗಳು:
ಪ್ರಕರಣದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತಹಶೀಲ್ದಾರ್ ವಿಜಯ್ ಕುಮಾರ್ ಹಾಗೂ ಡಿವೈಎಸ್ಪಿ ಶಂಕರ್‌ಗೌಡ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದೊಡ್ಡಹರಳಗೆರೆ ನಾಗೇಶ್ ಅವರು, ಅಂಬೇಡ್ಕರ್ ಪ್ರತಿಮೆಗೆ ಬೆಂಕಿ ಹಚ್ಚುವುದು, ಸಗಣಿ ಬಳಿಯುವ ಪ್ರಕರಣಗಳು ನಿರಂತರ ನಡೆಯುತ್ತಲೇ ಇದೆ. ಯನಗುಂಟೆ ಗ್ರಾಮದಲ್ಲಿ ಅಂಬೇಡ್ಕ ಪ್ರತಿಮೆಗೆ ಬೆಂಕಿ ಹಚ್ಚಿದ ಪ್ರಕರಣ ಮರೆಯುವ ಮುನ್ನವೇ ದಳಸಗೆರೆಯಲ್ಲಿ ಕಿಡಿಗೇಡಿಗಳು ಸಗಣಿ ಎರಚಿರುವುದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ. ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮತಾ ಸೈನಿಕ ದಳ ರಾಜ್ಯ ಘಟಕದ ಅಧ್ಯಕ್ಷ ಚನ್ನಕೃಷ್ಣಪ್ಪ ಮಾತನಾಡಿ, ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ಇಲ್ಲವಾಗಿದೆ. ಪೊಲೀಸರು ಕೂಡ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪಿಡಿಒ ಮುನಿರಾಜು, ಪೊಲೀಸ್ ವೃತ್ತನಿರೀಕ್ಷಕ ದಿವಾಕರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.