ಉತ್ತರಪ್ರದೇಶ: ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ಹಿಂಸೆ, ದೌರ್ಜನ್ಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದ್ದು, ದಲಿತ ಯುವಕನನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮುಝಪ್ಪರ್ ನಗರ ಜಿಲ್ಲೆಯ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋಲಾ ಗ್ರಾಮದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಅಂಕಿತ್ ಎಂಬ ದಲಿತ ಸಮುದಾಯಕ್ಕೆ ಸೇರಿದ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಅಂಕಿತ್ ಕುಟುಂಬದವರು ಈ ಕುರಿತು ದೂರು ದಾಖಲಿಸಿದ್ದು, ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ರವಿವಾರದಿಂದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು, ಆ ಬಳಿಕ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದು ಖತೌಲಿ ಸರ್ಕಲ್ ಆಫೀಸರ್ ರವಿಶಂಕರ್ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಂಕಿತ್‌ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂದು ಘೋಷಿಸಲಾಯಿತು.
ಈ ಕುರಿತು ಖತೌಲಿ ಸರ್ಕಲ್ ಆಫೀಸರ್ ರವಿಶಂಕರ್ ಮಾತನಾಡಿದ್ದು, ಘಟನೆ ಬಗ್ಗೆ ಸಂತ್ರಸ್ತನ ಕುಟುಂಬಸ್ಥರು ಪ್ರಕರಣವನ್ನು ದಾಖಲಿಸಿದ್ದಾರೆ. ತನಿಖೆಯ ಭಾಗವಾಗಿ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಅಂಕಿತ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತ ವರದಿ ಬಂದ ಬಳಿಕ ಹೆಚ್ಚಿನ ತನಿಖೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಠಿಣ ಸೆಕ್ಷನ್ 302 (ಕೊಲೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯಿದೆಯ ನಿಬಂಧನೆಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವು ಸ್ಥಳೀಯರ ಭಾವನೆಯನ್ನು ಕೆರಳಿಸಿದ್ದು, ಯುವಕನ ಹತ್ಯೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಪೊಲೀಸರು ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನಿಗಾ ವಹಿಸಿದ್ದಾರೆ.