ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಒಂಬತ್ತು ತಿಂಗಳಲ್ಲಿ 45 SC/ST ದೌರ್ಜನ್ಯ ಪ್ರಕರಣಗಳು ದಾಖಲು – ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

  ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 3ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

  ಜಿಲ್ಲೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಿ ಅದರ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರ ವಹಿಸಲು ಸೂಚನೆ ನೀಡಿದರು. 

  ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು 4 ಸಭೆಗಳನ್ನು ನಡೆಸಬೇಕಾಗಿದ್ದು, 2024ನೇ ಕ್ಯಾಲೆಂಡರ್ ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಿ ಎಂದು ಹೇಳಿದರು. 

  ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕಾಗಿರುತ್ತದೆ, ಈಗಾಗಲೇ ದೊಡ್ಡಬಳ್ಳಾಪುರ ವಿಭಾಗದಲ್ಲಿ ಒಂದು ಸಭೆ ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು‌ ತಿಳಿಸಿದರು. 

  ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಜುಲೈ. 1 ರಿಂದ 2024ರ ಸೆಪ್ಟೆಂಬರ್. 22 ವರೆಗೆ ಒಟ್ಟು 78 ಜನ ಸಂತ್ರಸ್ತರಿಗೆ ಒಟ್ಟು ರೂ. 51,02,500/- ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. 

  ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಪ್ರಗತಿ ಇದೆ ಎಂದು ಹೇಳಿದರು. 

  ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಹಳ್ಳಿಗಳನ್ನು ಗುರುತಿಸಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ‌ ನೀಡಿದರು. 

  ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಬಳಿ ಪಡೆದುಕೊಂಡರು. ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ ಜಿಲ್ಲೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳ ಸಂಖ್ಯೆ 45 ಆಗಿದೆ‌ ಎಂದು ಅವರು ಹೇಳಿದರು. 

  ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಅಮೃತ್ ಆತ್ರೇಶ, ಡಿವೈಎಸ್ಪಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ ಟಿ.ಎಲ್‌.ಎಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related Posts

ನೆಲಮಂಗಲ: 15 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 70 ರ ಮುದುಕ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ…

ತಾನು ಕೊಂದಿದ್ದ ಮಹಿಳೆಯ ದೇಹವನ್ನು ಅಂತ್ಯಸಂಸ್ಕಾರ ವೇಳೆ ಹೊತ್ತೊಯ್ಯಲು ಯತ್ನಿಸಿದ ಚಿರತೆ! ನೆಲಮಂಗಲದಲ್ಲೊಂದು ಭಯಾನಕ ಘಟನೆ

ನೆಲಮಂಗಲ: ಒಂಟಿಯಾಗಿ ಸಿಗುವವರ ಮೇಲೆ ದಾಳಿ ಮಾಡಿ ಕೊಂದು ತಿನ್ನುವ ಚಿರತೆ ಜನ ಸಮೂಹವನ್ನು ಕಂಡಾಗ ಅಡಗಿ ಕುಳಿತುಕೊಳ್ಳುತ್ತದೆ. ಆದರೆ ನೆಲಮಂಗಲದಲ್ಲಿ ಮಾತ್ರ ಇದಕ್ಕೆ ವಿರೋಧವೆಂಬಂತೆ ಚಿರತೆಯೊಂದು ಜನರು ಮೃತ ಮಹಿಳೆಯ ಶವವನ್ನು ಕಾಯುತ್ತಿದ್ದಾಗಲೇ ಅವರನ್ನು ಬೆದರಿಸಿ ಮೃತದೇಹವನ್ನು ಹೊತ್ತೊಯ್ಯಲು ಯತ್ನಿಸಿದೆ. ಬೆಂಗಳೂರು…

Leave a Reply

Your email address will not be published. Required fields are marked *