ಬೆಂಗಳೂರು: ಕಾರಿನೊಳಗೆ ಕುಳಿತು ಉದ್ಯಮಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ನಡೆದಿದೆ. ಶನಿವಾರ ಸಂಜೆ (ನವೆಂಬರ್ 16) ಈ ಘಟನೆ ನಡೆದಿದೆ.
ಮೃತರನ್ನು ನಾಗರಭಾವಿ ನಿವಾಸಿ ಪ್ರದೀಪ್ (42) ಎಂದು ಗುರುತಿಸಲಾಗಿದೆ. ವಾಹನವೊಂದು ಹೊತ್ತಿ ಉರಿದಿರುವ ಬಗ್ಗೆ ಪೊಲೀಸರಿಗೆ ತುರ್ತು ಕರೆ ಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಾರಿನೊಳಗಿದ್ದ ಪ್ರದೀಪ್ ಉಸಿರುಗಟ್ಟಿ ಅದಾಗಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹೋಟೆಲ್ ಉದ್ಯಮದಲ್ಲಿ ಪ್ರದೀಪ್ ನಷ್ಟ ಅನುಭವಿಸಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಅವರು ಇದೇ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯ ಕುರಿತು ಮಾಹಿತಿ ನೀಡಿರುವ ಡಿಸಿಪಿ ಗಿರೀಶ್, ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಕೋಡಾ ಕಾರಿನಲ್ಲಿ ಪ್ರದೀಪ್ ಮುದ್ದಿನಪಾಳ್ಯದ ವಿಶ್ವೇಶ್ವರಯ್ಯ ಬಡಾವಣೆಗೆ ಬಂದಿದ್ದರು. ನಂತರ ಅವರು ಕಾರಿನಲ್ಲಿ ಕುಳಿತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರು ಸುಟ್ಟು ಭಸ್ಮವಾಗಿದ್ದು, ಪ್ರದೀಪ್ ಮೃತದೇಹ ಗುರುತು ಸಿಗದಂತಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರದೀಪ್ ಅವರ ಕುಟುಂಬ ಮತ್ತು ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಘಟನಾ ಸ್ಥಳದಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ.
ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರದೀಪ್ ಸಾವಿಗೆ ಹಣಕಾಸಿನ ಅಥವಾ ವೈಯಕ್ತಿಕ ಸಮಸ್ಯೆ ಏನಾದರೂ ಇತ್ತೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.